ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಹಲವೆಡೆ ರಸ್ತೆ ಸಂಪರ್ಕವೂ ಕಡಿತಗೊಂಡಿವೆ. ಜಿಲ್ಲಾಡಳಿತ ಈ ವಿಷಯವನ್ನು ನನ್ನ ಗಮನಕ್ಕೆ ತಂದ ತಕ್ಷಣ ರಾಜ್ಯದ ಒಂದು SDRF ತಂಡದ ಸುಮಾರು 250 ಸದಸ್ಯರನ್ನು ತಡರಾತ್ರಿಯೇ ಸ್ಥಳಕ್ಕೆ ಕಳುಹಿಸಲು ವ್ಯವಸ್ಥೆ ಮಾಡಿದ್ದೇನೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೆಲವು ಗ್ರಾಮಗಳೂ ಸಹ ಜಲಾವೃತಗೊಂಡಿವೆ.
ಉಡುಪಿ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿಕೊಂಡಿದ್ದ ಸುಮಾರು 200ಕ್ಕೂ ಹೆಚ್ಚು ಜನರನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ. SDRF ಜೊತೆಗೆ NDRF ತಂಡವೂ ಕೂಡ ಕೆಲವೇ ಸಮಯದಲ್ಲಿ ಸ್ಥಳಕ್ಕೆ ತಲುಪಲಿದ್ದು, ಜಂಟಿ ಕಾರ್ಯಾಚರಣೆಯಲ್ಲಿ ತೊಡಗಲಿದೆ ಎಂದರು.
ಉಡುಪಿ ಜಿಲ್ಲಾಡಳಿತಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ಈ ಬಗ್ಗೆ ಕಂದಾಯ ಸಚಿವರಾದ ಆರ್.ಅಶೋಕ ಅವರ ಜೊತೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನ್ನು ನೀಡಲು ಕೇಳಿಕೊಂಡಿರುತ್ತೇನೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಉಡುಪಿ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.