ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಗಸ್ಟ್ 25ರಂದು ಸಿಎಂ ವೈಮಾನಿಕ ಸಮೀಕ್ಷೆ

0

ಮಳೆಯಿಂದ ಹಾನಿಗೊಳಗಾದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಆಗಸ್ಟ್ 25ರ ಮಂಗಳವಾರ ಅವರು ಬಾಗಲಕೋಟೆ, ಬೆಳಗಾವಿ, ವಿಜಯಪುರ ಮತ್ತು ಗದಗ ಜಿಲ್ಲೆಗಳಲ್ಲಿ ಒಂದು ದಿನದ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಯ ಬಳಿಕ ಅವರು ಆಲಮಟ್ಟಿ ಅಣೆಕಟ್ಟಿನಲ್ಲಿ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಜತೆ ಸಭೆ ನಡೆಸಲಿದ್ದಾರೆ.

ಆಗಸ್ಟ್ 25ರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಡಿರುವ ಅವರು, 10.15ರ ಸುಮಾರಿಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಅಲ್ಲಿ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜತೆಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ. ಬಳಿಕ ಮಳೆಯಿಂದ ಹಾನಿಗೊಳಗಾದ ಸ್ಥಳಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಮಧ್ಯಾಹ್ನ ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ ಭೇಟಿ ನೀಡಿ ಅಲ್ಲಿನ ಅತಿಥಿ ಗೃಹದಲ್ಲಿ ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಐಎಎಫ್ ಹೆಲಿಕಾಪ್ಟರ್ ಮೂಲಕ ವಿಜಯಪುರ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಸಂಜೆ 5 ಗಂಟೆಗೆ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಉತ್ತರ ಕರ್ನಾಟಕದ ಹಲವೆಡೆ ಮಳೆ ಮತ್ತು ಪ್ರವಾಹದಿಂದ ಜನಜೀವನ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಅನೇಕರು ಸಂತ್ರಸ್ತರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಮಳೆಯ ಪರಿಣಾಮದಿಂದ ಕರ್ನಾಟಕದ ಅನೇಕ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗುತ್ತಿವೆ.

LEAVE A REPLY

Please enter your comment!
Please enter your name here