ಬೆಳಗಾವಿ, ಸೆಪ್ಟೆಂಬರ್ 11: ಕುಡಿದ ಮತ್ತಿನಲ್ಲಿ ದೇಶ ರಕ್ಷಣೆ ಮಾಡುವ ಸೈನಿಕನ ಮನೆಗೆ ನುಗ್ಗಿ ದಾಂಧಲೆ ನಡೆಸಿ, ಬೆಂಕಿ ಹಚ್ಚಲು ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಸೈನಿಕನ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಮಾಹಿತಿ ನೀಡಿದ್ದಾರೆ.
ಸೈನಿಕನ ಮನೆ ಮೇಲೆ ದಾಂಧಲೆ ನಡೆಸಿರುವ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತರು, “”ಬೆಳಗಾವಿ ತಾಲೂಕಿನ ಕಿಣಯೆ ಗ್ರಾಮದ ಭರತೇಶ ಚೌಗುಲೆ ಅವರು ಅಸ್ಸಾಂನಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಹಣದ ವಿಚಾರವಾಗಿ ಸೆ.1 ರಂದು ಯೋಧನ ಮನೆಗೆ ನುಗ್ಗಿದ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ” ಎಂದು ಮಾಹಿತಿ ನೀಡಿದರು.
ಮಹೇಶ ದುರ್ಕೆ ಮತ್ತು ಆತನ ಸ್ನೇಹಿತರು ಸೇರಿ ಸೈನಿಕ ಭರತೇಶ ಚೌಗುಲೆ ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಮನೆಗೆ ಬೆಂಕಿ ಹಚ್ಚಲು ಯತ್ನಿಸಿದ್ದರು. ಈ ಕುರಿತು ಯೋಧನ ಕುಟುಂಬ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಿಡಿಗೇಡಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.